ಹಾವೇರಿ: ಜಿಲ್ಲೆಯ ಬಂಕಾಪುರದಲ್ಲಿ ಲಾರಿ ಚಾಲಕನಿಗೆ ಚಾಕು ತೋರಿಸಿ ಹಣ ಹಾಗೂ ಮೊಬೈಲ್ ದೋಚಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ಮೊಬೈಲ್‌ನ್ನು ವಶಪಡಿಸಿಕೊಂಡಿದ್ದಾರೆ.
ಸುದ್ಧಿ ಸಾರಾಂಶ
ಹಾವೇರಿ ಜಿಲ್ಲೆಯ ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಆಗಸ್ಟ್ 22ರಂದು ಬೆಳಗಿನ ಜಾವ ಸುಮಾರು 3 ಗಂಟೆ 30 ನಿಮಿಷದ ವೇಳೆಗೆ, ಗೋಕಾಕ ಮೂಲದ ಲಾರಿ ಚಾಲಕ ಹವಳಪ್ಪ ಅವರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬಂಕಾಪುರದ ಪಂಚವಟಿ ಹೋಟೆಲ್ ಎದುರು ತಮ್ಮ ಲಾರಿಯನ್ನು ನಿಲ್ಲಿಸಿದ್ದರು.
ಈ ವೇಳೆ ನಾಲ್ವರು ವ್ಯಕ್ತಿಗಳು ಸ್ಟೀಲ್ ಬಣ್ಣದ ಕಾರಿನಲ್ಲಿ ಸ್ಥಳಕ್ಕೆ ಬಂದು, ಲಾರಿ ಚಾಲಕನಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾರೆ. ರೊಕ್ಕ ಹಾಗೂ ಮೊಬೈಲ್ ನೀಡದಿದ್ದರೆ ಕೊಲೆ ಮಾಡುವುದಾಗಿ ಹೆದರಿಸಿ, ಚಾಲಕನ ಬಳಿಯಿದ್ದ 4 ಸಾವಿರದ 700 ರೂಪಾಯಿ ನಗದು ಹಾಗೂ ವಿವೋ ಕಂಪನಿಯ ಮೊಬೈಲ್‌ನ್ನು ಕಸಿದುಕೊಂಡು ಪರಾರಿಯಾಗಿದ್ದರು.
ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ, ಶಿಗ್ಗಾಂವ ಡಿವೈಎಸ್‌ಪಿ ಗುರುಶಾಂತಪ್ಪ ಕೆ.ಎಂ. ಹಾಗೂ ಶಿಗ್ಗಾಂವ ವೃತ್ತದ ಸಿಪಿಐ ಅನಿಲ್‌ಕುಮಾರ ರಾಠೋಡ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ್ದಾರೆ.
ಬಂಕಾಪುರ ಪಿಎಸ್‌ಐ ಮಂಜುನಾಥ ಎಸ್. ಕುರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದೆ.
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕೆಎ-27/ಸಿ-2742 ನೋಂದಣಿ ಸಂಖ್ಯೆಯ ಸ್ಟೀಲ್ ಬಣ್ಣದ ಕಾರು ಹಾಗೂ ವಿವೋ ಕಂಪನಿಯ ಮೊಬೈಲ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬಂಕಾಪುರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಾಚರಣೆಗೆ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.